07/03/2026

Law Guide Kannada

Online Guide

ವಕ್ಫ್ ಗೆ ವಿವಾಹ ನೋಂದಣಿ ಅಧಿಕಾರ ಆದೇಶ ವಾಪಸ್ ಪಡೆದ ಸರ್ಕಾರ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮುಸ್ಲಿಮರ ವಿವಾಹ ನೋಂದಣಿ ಹಾಗೂ ಮುಸ್ಲಿಂ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ವಹಿಸಿ 2023ರ ಆಗಸ್ಟ್ 30ರಂದು ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನ ವಜಾಗೊಳಿಸಿದೆ.

ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ವಹಿಸಿ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರಿನ ಎ. ಆಲಂ ಪಾಷಾ ಎಂಬುವರು 2024ರಲ್ಲಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು.

ವಿಚಾರಣೆ ವೇಳೆ ಮೆಮೊ ಸಲ್ಲಿಸಿದ ಸರ್ಕಾರದ ಪರ ವಕೀಲರು, ‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2023ರ ಆಗಸ್ಟ್ 30ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ’ ಎಂದು ವಿವರಿಸಿದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಇತ್ಯರ್ಥಪಡಿಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ, ಮುಸ್ಲಿಂ ಸಮುದಾಯದ ವಿವಾಹ ನೋಂದಣಿ ಹಾಗೂ ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 2023ರ ಆಗಸ್ಟ್ 30ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಸರ್ಕಾರದ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿತು. 2024ರ ನೆವಂಬರ್ 21ಕ್ಕೆ ಹೈಕೋರ್ಟ್ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.