14/05/2026

Law Guide Kannada

Online Guide

ಅತ್ಯಾಚಾರ ಕೇಸ್ ನಲ್ಲಿ ಪ್ರತಿಕೂಲ ಸಾಕ್ಷಿ: ಸಂತ್ರಸ್ತೆಗೆ ಪರಿಹಾರ ಘೋಷಿಸಿದ್ದ ಕೋರ್ಟ್ ಆದೇಶ ರದ್ದು

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪ್ರತಿಕೂಲ ಸಾಕ್ಷಿ ನುಡಿದ ಸಂತ್ರಸ್ತೆಗೆ ಪರಿಹಾರ ಘೋಷಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಪ್ರತಿಕೂಲ ಸಾಕ್ಷ್ಯ ನುಡಿದ ಸಂತ್ರಸ್ತೆಗೆ 3 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಪ್ರಕರಣದಲ್ಲಿ ಪ್ರತಿಕೂಲ ಸಾಕ್ಷಿ ನುಡಿದ ಸಂತ್ರಸ್ತೆಗೆ ಪರಿಹಾರ ಘೋಷಿಸಿದ ಕೋರ್ಟ್ ಆದೇಶವನ್ನು ರದ್ದುಪಡಿಸಿದೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಸಾಕ್ಷಿ ನುಡಿಯದೆ ಪ್ರತಿಕೂಲ ಸಾಕ್ಷ್ಯ ನುಡಿಯುವ ಸಂತ್ರಸ್ತರಿಗೆ ಸರಕಾರದ ಸಂತ್ರಸ್ತರ ಪರಿಹಾರ ಯೋಜನೆಯಡಿ ಪರಿಹಾರ ನೀಡುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠ ತೀರ್ಪು ನೀಡಿದೆ.

”ಸಂತ್ರಸ್ತೆ ನೀಡಿದ ಪ್ರತಿಕೂಲ ಹೇಳಿಕೆಯ ಆಧಾರದಲ್ಲಿ ಆರೋಪಿ ಖುಲಾಸೆಗೊಂಡಿದ್ದಾನೆ. ಆದ್ದರಿಂದ, ಪ್ರತಿಕೂಲ ಹೇಳಿಕೆ ನೀಡಿದ ಸಂತ್ರಸ್ತೆಗೆ ಪರಿಹಾರ ನೀಡಲು ನಿರ್ದೇಶಿಸಿರುವ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಲಾಗಿದೆ,” ಎಂದು ಪೀಠ ತಿಳಿಸಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪರ ಎ.ಎಸ್.ವಿಶ್ವೇಶ್ ವಾದ ಮಂಡಿಸಿದ್ದರು.

ಏನಿದು ಪ್ರಕರಣ..?
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆ, ತನಿಖಾಧಿಕಾರಿ ಮತ್ತು ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಆರೋಪಿಯ ವಿರುದ್ಧ ಸಾಕ್ಷಿ ಹೇಳುವುದಾಗಿ ಹೇಳಿದ್ದರು. ಕೋರ್ಟ್ ನಲ್ಲಿ ಪಾಟಿ ಸವಾಲು ಸಂದರ್ಭದಲ್ಲಿ ತಮ್ಮ ಮೊದಲಿನ ಹೇಳಿಕೆಗೆ ತದ್ವಿರುದ್ಧ ವಿವರಣೆ ನೀಡಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.