12/09/2026

Law Guide Kannada

Online Guide

ಡ್ರಗ್ಸ್ ಮಾರಾಟ ಕೇಸ್: ಆರೋಪಿಗೆ ಹತ್ತು ವರ್ಷ ಕಠಿಣ ಶಿಕ್ಷೆ ಮತ್ತು ದಂಡ

ಬೆಂಗಳೂರು: ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಆರೋಪಿಗೆ ಹತ್ತು ವರ್ಷ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ಸಿಸಿಎಚ್ 35ನೇ ನ್ಯಾಯಾಲಯ ತೀರ್ಪು ನೀಡಿದೆ

ದೇವನಹಳ್ಳಿ ಪಟ್ಟಣದ ಮಲಬಾಗಲೂರು ಗ್ರಾಮದ ಭಗೀರಥ್ ದೆವಾಸಿ (44) ಕಠಿಣ ಜೈಲುಶಿಕ್ಷೆಗೆ ಗುರಿಯಾದ ಆರೋಪಿ. ಸಿಸಿಎಚ್ 35ನೇ ನ್ಯಾಯಾಲಯದ ನ್ಯಾಯಾಧೀಶ ಆನಂದ್ ಅವರು ಹತ್ತು ವರ್ಷ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದ ಹಿನ್ನೆಲೆ.
ಆರೋಪಿ ಭಗೀರಥ್ ದೆವಾಸಿ 2021ರ ಆಗಸ್ಟ್ 19ರಂದು ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬನಶಂಕರಿ 3ನೇ ಹಂತದ ಇಂದಿರಾ ಕ್ಯಾಂಟೀನ್ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಪೊಲೀಸರು, ಭಗೀರಥ್ ನನ್ನು ವಶಕ್ಕೆ ಪಡೆದು 2 ಕೆ.ಜಿ. 40 ಗ್ರಾಂ ಮಾದಕವಸ್ತು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದರು.

ನಂತರ ಭಗೀರಥ್ ವಿರುದ್ದ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು. ಪೊಲೀಸ್ ಇನ್ಸ್ಪೆಕ್ಟರ್ ಎಲ್. ದೀಪಕ್ ಅವರು ತನಿಖೆ ಕೈಗೊಂಡು, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು.

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಭಗೀರಥ್ ಗೆ ಹತ್ತು ವರ್ಷ ಕಠಿಣ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಭಿಯೋಜಕರಾದ ಸಿ.ಕೆ.ಶ್ರೀವಾಣಿ ವಾದ ಮಂಡಿಸಿದರು.

ಎಚ್ ಎನ್ ವೆಂಕಟೇಶ್
ಗೌರವ ಸಂಪಾದಕರು
ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಮೈಸೂರು

Copyright © All rights reserved. | Newsphere by AF themes.