07/03/2026

Law Guide Kannada

Online Guide

ಲಂಚ ಸ್ವೀಕಾರ: ಹೆಡ್ ಕಾನ್ಸ್ ಟೇಬಲ್ ಗೆ ವಿಧಿಸಿದ್ದ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಲಂಚ ಸ್ವೀಕರಿಸಿರುವ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದ ಬಾಗಲಗುಂಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಎಂ.ಕೆ.ಮಂಜಣ್ಣ ಎಂಬುವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿದು ಆದೇಶಿಸಿದೆ.

ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ಲಂಚ ಪಡೆದಿದ್ದು ರುಜುವಾತಾದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಒಟ್ಟು 4 ವರ್ಷ ಶಿಕ್ಷೆ ಮತ್ತು 50 ಸಾವಿರ ರೂ. ದಂಡದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಮಂಜಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.

ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಪೊಲೀಸ್ ಅಧಿಕಾರಿಯಾಗಿದ್ದ ಮಂಜಣ್ಣ ಅವರಿಗೆ ವಿಚಾರಣಾ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ತೆರುವಂತೆ ಆದೇಶ ನೀಡಿತ್ತು.

ಭ್ರಷ್ಟಾಚಾರ ಅಪರಾಧ ಪ್ರಕರಣಗಳಲ್ಲಿ ಮುಖ್ಯವಾಗಿ ಹಣದ ಬೇಡಿಕೆ ಇಟ್ಟಿರುವುದು ಮತ್ತು ಹಣ ಪಡೆಯುತ್ತಿರುವುದು ಸಾಬೀತಾಗಬೇಕು. ಸದ್ರಿ ಈ ಪ್ರಕರಣದಲ್ಲಿ ಅವೆರಡು ದೃಢಪಟ್ಟಿವೆ. ಹೀಗಾಗಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಖಾಯಂಗೊಳಿಸಲಾಗುತ್ತಿದೆ ಎಂದು ನ್ಯಾಯ ಪೀಠ ತೀರ್ಪಿನಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ
ಬಾಕಿ ಇರುವ ಕ್ರಿಮಿನಲ್ ಪ್ರಕರಣ ಮುಕ್ತಾಯಗೊಳಿಸಲು 2017ರಲ್ಲಿ 10 ಸಾವಿರ ರು.ಗಳ ಲಂಚ ಸ್ವೀಕರಿಸಿರುವ ಸಂದರ್ಭದಲ್ಲಿ ಬಾಗಲಗುಂಟೆಯ ಹೆಡ್ ಕಾನ್ಸ್ ಟೇಬಲ್ ಎಂ.ಕೆ ಮಂಜಣ್ಣ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳ ಕಾರ್ಯಾಚರಣೆಯ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣದ ಬಗ್ಗೆ ಪೊಲೀಸರು ಆರೋಪಪಟ್ಟಿಯನ್ನೂ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ಆರೋಪಿಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿತ್ತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.