06/03/2026

Law Guide Kannada

Online Guide

ಇ-ಖಾತಾ ಸಮಸ್ಯೆ ನಿವಾರಣೆಗೆ ಜಂಟಿ ಕಾರ್ಯಪಡೆ ರಚನೆ

ಬೆಂಗಳೂರು: ರಾಜ್ಯದಲ್ಲಿ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಇ-ಆಸ್ತಿ. ಇ-ವಿನ್ಯಾಸ ಮತ್ತು ಇ-ಸ್ವತ್ತು ವಿತರಣೆಯಲ್ಲಿ ಆಗಿರುವ ಸಮಸ್ಯೆಗಳ ಪರಿಹಾರಕ್ಕೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಜಂಟಿ ಕಾರ್ಯಪಡೆ ರಚನೆಗೆ ನಿರ್ಧಾರ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ, ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ನಗರ & ಗ್ರಾಮಾಂತರ ಮೂರು ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ಕಾರ್ಯಪಡೆ ರಚನೆ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ, ಪೌರಾಡಳಿತ ಸಚಿವ ರಹೀಂ ಖಾನ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಮಲೆನಾಡು ಪ್ರದೇಶದಲ್ಲಿ ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖಾತಾ ವಿತರಿಸುವಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮಠಾಣಾ ವ್ಯಾಪ್ತಿಯ ವಿಸ್ತರಣೆ ಮುಂತಾದ ಸಮಸ್ಯೆಗಳಿಗೂ ಪರಿಹಾರೋಪಾಯಗಳನ್ನು ಶಿಫಾರಸು ಮಾಡುವಂತೆ ಸೂಚಿಸಲಾಗಿದ್ದು, ಖಾತಾ ವಿತರಿಸುವಲ್ಲಿ ಭವಿಷ್ಯದಲ್ಲಿ ಎದುರಾಗುವ ಸಮಸ್ಯೆಗಳೂ ಸೇರಿ ಈಗ ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸೂಚಿಸುವಂತೆ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.

ಈ ಜಂಟಿ ಕಾರ್ಯಪಡೆಯು ಸರ್ಕಾರದ ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡಿದೆ. ಆಸ್ತಿಗಳ ಖಾತೆ ಹಾಗೂ ನಕ್ಷೆಗಳ ಮಂಜೂರಾತಿಗೆ ಸಂಬಂಧಿಸಿದ ತೊಡಕುಗಳ ನಿವಾರಣೆಗೆ ಕಂದಾಯ ಸಚಿವಾಲಯ, ಗ್ರಾಮೀಣಾಭಿವೃದ್ಧಿ ಸಚಿವಾಲಯ ಹಾಗೂ ಪೌರಾಡಳಿತ ಸಚಿವಾಲಯದ ಅಧಿಕಾರಿಗಳ ಸಭೆಯಲ್ಲಿ ಈ ಸಚಿವಾಲಯದ ಮೂವರು ಸಚಿವರ ಸಮ್ಮುಖದಲ್ಲಿ ಜಂಟಿ ಕಾರ್ಯಪಡೆ ರಚಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.

ಇ-ಖಾತಾ ವಿತರಿಸುವಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಠಾಣಾ ವ್ಯಾಪ್ತಿಯ ವಿಸ್ತರಣೆ ಕುರಿತು ಅಧ್ಯಯನ ನಡೆಸಿ ಶಿಫಾರಸು ಸಲ್ಲಿಸಲು ಕಾರ್ಯಪಡೆಗೆ ನಿರ್ದೇಶನ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಗಳ ವ್ಯಾಪ್ತಿಯಲ್ಲಿ ಖಾತೆ ಹೊಂದಿರದ ವಸತಿ ಹಾಗೂ ವಾಣಿಜ್ಯ ಆಸ್ತಿಗಳಿಗೆ ಬಿಬಿಎಂಪಿ ಮಾದರಿಯಲ್ಲಿ ಖಾತಾ ನೀಡುವ ವ್ಯವಸ್ಥೆ ಜಾರಿಗೆ ತರಲು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸಮ್ಮತಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗಳೂ ಇ-ಆಸ್ತಿ ವ್ಯಾಪ್ತಿಗೆ ಬರಲಿದ್ದು, ಈ ಬಗ್ಗೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ಎಲ್ಲ ಆಸ್ತಿಗಳಿಗೂ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಈಗ ಇರುವ ಪ್ರಕ್ರಿಯೆಯಲ್ಲಿ ಇರುವ ಲೋಪವನ್ನು ಸರಿಪಡಿಸಲಾಗುವುದು, ಇ-ಖಾತಾ ಕಡ್ಡಾಯವಾಗಿರುವುದರಿಂದ ನಕಲಿ ಖಾತೆಗಳನ್ನು ಸೃಷ್ಟಿಸಿ ಅಕ್ರಮ ಎಸಗುವುದು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಗಳನ್ನು ಇ-ಆಸ್ತಿ ವ್ಯಾಪ್ತಿಗೆ ತರಲು ನಿರ್ಧರಿಸಲಾಗಿದೆ. ಆಸ್ತಿಗಳ ವಿಸ್ತೀರ್ಣದ ಮಾಹಿತಿ ಇಲ್ಲದ ಪ್ರಕರಣಗಳಲ್ಲಿ ಅಳತೆ ನಮೂದಿಸಲು ಅವಕಾಶ ಕಲ್ಪಿಸಲು ಎನ್ಐಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.