12/11/2026

Law Guide Kannada

Online Guide

48 ಗಂಟೆಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ರೆ ಸರ್ಕಾರಿ ನೌಕರ ಸ್ವಯಂ ಅಮಾನತು – ಸುಪ್ರೀಂಕೋರ್ಟ್

ನವದೆಹಲಿ: ಸರ್ಕಾರಿ ನೌಕರನು ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 48 ಗಂಟೆಗಳಿಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರೆ (ಜೈಲಿನಲ್ಲಿ) ಕಾನೂನಿನ ಪ್ರಕಾರ ತಾನಾಗಿಯೇ ಅಮಾನತುಗೊಂಡಿದ್ದಾರೆ (ಡೀಮ್ಡ್ ಸಸ್ಪೆನ್ಷನ್) ಎಂದೇ ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ನೌಕರನನ್ನು ಅಮಾನತುಗೊಳಿಸಲು ಸರ್ಕಾರ ಪ್ರತ್ಯೇಕ ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಬಿಹಾರದ ಸಮಸ್ತಿಪುರದ ಸದರ್ ಆಸ್ಪತ್ರೆಯ ಆಡಳಿತಾಧಿಕಾರಿ ವಿಶ್ವಜೀತ್ ಸಿಂಗ್ ಎಂಬಾತನ ಲಂಚ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ನ್ಯಾ. ಮನ್ಮೋಹನ್ ಅವರಿದ್ದ ವಿಭಾಗೀಯ ಪೀಠವು, ಆರೋಪಿಯು ಲಂಚ ಪ್ರಕರಣದಲ್ಲಿ ಸುಮಾರು 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರೂ, ಆತನ ಅಮಾನತನ್ನು ರದ್ದುಪಡಿಸಿ ಮತ್ತೆ ಅದೇ ಆಸ್ಪತ್ರೆಯಲ್ಲಿ ಅದೇ ಹುದ್ದೆಗೆ ಮರುನೇಮಕ ಮಾಡಿಕೊಂಡಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿತು.

ಸೇವಾ ನಿಯಮಗಳ ಪ್ರಕಾರ, ಯಾವುದೇ ಸಾರ್ವಜನಿಕ ಸೇವಕನು 48 ಗಂಟೆಗಳಿಗಿಂತ ಹೆಚ್ಚು ಕಾಲ ಕಸ್ಟಡಿಯಲ್ಲಿದ್ದರೆ ಆತ ಸ್ವಯಂಚಾಲಿತವಾಗಿ ಅಮಾನತಿಗೆ ಒಳಪಡುತ್ತಾನೆ. ಇದಕ್ಕಾಗಿ ಪ್ರತ್ಯೇಕ ಅಧಿಕೃತ ಆದೇಶ ಹೊರಡಿಸುವ ಅಗತ್ಯವಿಲ್ಲ. ಆರೋಪಿಯನ್ನು ಮತ್ತೆ ಅದೇ ಹುದ್ದೆಗೆ ನೇಮಿಸಿರುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿತು.

ಎಚ್ ಎನ್ ವೆಂಕಟೇಶ್
ಗೌರವ ಸಂಪಾದಕರು
ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಮೈಸೂರು

Copyright © All rights reserved. | Newsphere by AF themes.