25/11/2026

Law Guide Kannada

Online Guide

ಕೋರ್ಟ್ ನಲ್ಲಿ ಗದ್ದಲ ಸೃಷ್ಟಿಸಿದ್ದ ವಕೀಲರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಮುಕ್ತಾಯ

ಬೆಂಗಳೂರು: ರಾಜ್ಯದಲ್ಲಿ ವಕೀಲರ ಮೇಲಿನ ದೌರ್ಜನ್ಯ ಘಟನೆಗಳನ್ನ ಖಂಡಿಸಿ ಬೆಂಗಳೂರು ಸಂಘ ಕರೆ ನೀಡಿದ್ದ ಪ್ರತಿಭಟನೆಯ ವೇಳೆ ಮುಖ್ಯನ್ಯಾಯಮೂರ್ತಿಗಳ ಕೋರ್ಟ್ ಹಾಲ್ ನಲ್ಲಿ ಗದ್ದಲ ಸೃಷ್ಟಿಸಿದ್ದ ಆರೋಪದ ಮೇಲೆ ವಕೀಲರ ವಿರುದ್ದ ಸ್ವಯಂಪ್ರೇರಿತವಾಗಿ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನ ಹೈಕೋರ್ಟ್ ಮುಕ್ತಾಯಗೊಳಿಸಿದೆ.

ಹೈಕೋರ್ಟ್ ದಾಖಲಿಸಿಕೊಂಡಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ದ್ವಿಸದಸ್ಯಪೀಠವು ವಕೀಲರು ಸಲ್ಲಿಸಿದ ಬೇಷರತ್ ಕ್ಷಮಾಪಣೆ ದಾಖಲಿಸಿಕೊಂಡು ಪ್ರಕರಣ ಇತ್ಯರ್ಥಪಡಿಸಿದೆ. ವಕೀಲರು ಸಲ್ಲಿಸಿದ ಬೇಷರತ್ ಕ್ಷಮಾಪಣೆಯನ್ನು ಅಂಗೀಕರಿಸಿದ ವಿಭಾಗೀಯ ಪೀಠವು, ಆರೋಪಿತ ವಕೀಲರನ್ನು ಪ್ರಕರಣದಿಂದ ಬಿಡುಗಡೆಗೊಳಿಸಿದೆ.

ಆರಂಭದಲ್ಲೇ ಆರೋಪಿತರು ಬೇಷರತ್ ಕ್ಷಮಾಪಣೆ ಕೋರಿ ಅಫಿಡವಿಟ್ ಸಲ್ಲಿಸಿದ್ದಾರೆ. ಪ್ರಕರಣದ ಆರಂಭಿಕ ಹಂತದಲ್ಲೇ ಕ್ಷಮಾಪಣೆ ಕೋರಿರುವುದರಿಂದ ಅದರ ಪ್ರಾಮಾಣಿಕತೆಯನ್ನು ಅನುಮಾನಿಸಲು ನಮಗೆ ಯಾವುದೇ ಕಾರಣವಿಲ್ಲ. ಕ್ಷಮಾಪಣೆಯ ಅಫಿಡವಿಟ್ ಅನ್ನು ಅಂಗೀಕರಿಸುತ್ತೇವೆ. ಆರೋಪಿತರನ್ನು ಬಿಡುಗಡೆಗೊಳಿಸಲಾಗಿದ್ದು, ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪೀಠ ತಿಳಿಸಿತು.

ರಾಜ್ಯದಲ್ಲಿ ವಕೀಲರ ಮೇಲಿನ ಹಿಂಸಾಚಾರ ಪ್ರಕರಣಗಳನ್ನು ಖಂಡಿಸಿ ಹಾಗೂ ವಕೀಲರ ಮೇಲಿನ ಹಿಂಸಾಚಾರ ತಡೆ ಕಾಯಿದೆ-2023ರ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ಬೆಂಗಳೂರು ವಕೀಲರ ಸಂಘ (ಎಎಬಿ) ಮತ್ತು ಇತರ ವಕೀಲರ ಸಂಘಗಳು ಈ ತಿಂಗಳ ಆರಂಭದಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ಸಂದರ್ಭದಲ್ಲಿ ಹಲವು ವಕೀಲರು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದ ಸಭಾಂಗಣ ಪ್ರವೇಶಿಸಿ ಕಲಾಪಕ್ಕೆ ಅಡ್ಡಿಪಡಿಸಿ ಗದ್ದಲ ಸೃಷ್ಟಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್, ಸಂಬಂಧಪಟ್ಟ ವಕೀಲರ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತ್ತು.

ಪ್ರಕರಣ ವಿಚಾರಣೆಗೆ ಬಂದಾಗ, ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಪ್ರತಿಭಟನೆಯ ಸಂದರ್ಭದಲ್ಲಿ ಬೆಂಗಳೂರು ವಕೀಲರ ಸಂಘ ಪ್ರಸ್ತಾಪಿಸಿದ್ದ ಬೇಡಿಕೆಗಳಿಗೆ ಇತರ ಪೀಠಗಳೂ ಬೆಂಬಲ ವ್ಯಕ್ತಪಡಿಸಿದ್ದವು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದರೆ, ಪ್ರತಿಭಟನೆಯ ವೇಳೆ ವಕೀಲರು ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸುವಂತಹ ವರ್ತನೆ ತೋರಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು. ಆದಾಗ್ಯೂ, ವಕೀಲರು ಬೇಷರತ್ ಕ್ಷಮಾಪಣೆ ಸಲ್ಲಿಸಿರುವುದನ್ನು ಪರಿಗಣಿಸಿದ ಪೀಠವು ನ್ಯಾಯಾಂಗ ನಿಂದನೆ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

ಎಚ್ ಎನ್ ವೆಂಕಟೇಶ್
ಗೌರವ ಸಂಪಾದಕರು
ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಮೈಸೂರು

Copyright © All rights reserved. | Newsphere by AF themes.