25/11/2026

Law Guide Kannada

Online Guide

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನು ತಿರಸ್ಕರಿಸಿದ್ದ ಆದೇಶ ರದ್ದು

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಅಶ್ಲೀಲ ದೃಶ್ಯಗಳ ಚಿತ್ರೀಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಡ್ಡಾಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಕಡ್ಡಾಯ ಜಾಮೀನು ಅರ್ಜಿ ತಿರಸ್ಕರಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಜ್ವಲ್ ರೇವಣ್ಣ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ತನಿಖಾಧಿಕಾರಿಗಳು ನಿಗದಿತ ಗಡುವಿನೊಳಗೆ ಆರೋಪಪಟ್ಟಿ ಸಲ್ಲಿಸದಿರುವ ಅಂಶವನ್ನು ಪರಿಗಣಿಸಿದ ನ್ಯಾಯಾಲಯ,ಅಧೀನ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.

‘ನಿಗದಿತ ಅವಧಿಯೊಳಗೆ ಪೊಲೀಸರು ಆರೋಪಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಈ ಪ್ರಕರಣದಲ್ಲಿ ಕಡ್ಡಾಯ ಜಾಮೀನು ಕೋರಬಹುದು. ಆದರೆ, ಪ್ರತ್ಯೇಕ ಅತ್ಯಾಚಾರ ಪ್ರಕರಣದಲ್ಲಿಈಗಾಗಲೇ ಶಿಕ್ಷೆಯಾಗಿರುವುದರಿಂದ ಈ ಆದೇಶದ ಆಧಾರದಲ್ಲಿಅವರು ಜೈಲಿನಿಂದ ಬಿಡುಗಡೆಯಾಗುವುದಿಲ್ಲ. ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಏನಿದು ಪ್ರಕರಣ…?
2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಾಸನ ಕ್ಷೇತ್ರದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ದೃಶ್ಯಗಳನ್ನೊಳಗೊಂಡ ಸಾವಿರಾರು ವಿಡಿಯೋಗಳು ಪೆನ್ಡ್ರೈವ್ಗಳ ಮೂಲಕ ಹಾಸನ ಜಿಲ್ಲೆಯಾದ್ಯಂತ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗಿದ್ದವು. ನಂತರ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ರಾಜಕೀಯವಾಗಿ ಭಾರಿ ಸಂಚಲನ ಮೂಡಿಸಿತ್ತು.

ರೇವಣ್ಣ ಕುಟುಂಬದ ಮನೆಯಲ್ಲಿ ಹಾಗೂ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಹಾಗೂ ಮಾಹಿತಿ ತಂತ್ರಜ್ಞಾನಕಾಯ್ದೆಯಡಿ ಮೊದಲ ಎಫ್ಐಆರ್ ದಾಖಲಾಯಿತು. ನಂತರದ ದಿನಗಳಲ್ಲಿ ಪ್ರಜ್ವಲ್ ವಿರುದ್ದ ಪ್ರತ್ಯೇಕವಾಗಿ ನಾಲ್ಕು ಪ್ರಕರಣಗಳು ದಾಖಲಾದವು. ಎಸ್ಐಟಿ ತನಿಖೆ ನಡೆಸಿ, ನೂರಾರು ಸಾಕ್ಷ್ಯಗಳು, ವಿಧಿವಿಜ್ಞಾನ ವರದಿಗಳು ಹಾಗೂ ಸಂತ್ರಸ್ತೆಯರ ಹೇಳಿಕೆಗಳನ್ನೊಳಗೊಂಡ ಸಾವಿರಾರು ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆಯಾಯಿತು.

ಆಗಸ್ಟ್ 2025 ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿ, ಪುಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿತು. ಪ್ರಸ್ತುತ ಪ್ರಜ್ವಲ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲುವಾಸ ಅನುಭವಿಸುತ್ತಿದ್ದು , ಅವರ ವಿರುದ್ಧ ದಾಖಲಾಗಿರುವ ಇತರೆ 3 ಪ್ರತ್ಯೇಕ ಪ್ರಕರಣಗಳ ವಿಚಾರಣೆ ಹಾಗೂ ಜಾಮೀನು ಅರ್ಜಿಗಳು ನ್ಯಾಯಾಲಯದ ಪರಿಶೀಲನೆಯಲ್ಲಿದೆ.

ಎಚ್ ಎನ್ ವೆಂಕಟೇಶ್
ಗೌರವ ಸಂಪಾದಕರು
ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಮೈಸೂರು

Copyright © All rights reserved. | Newsphere by AF themes.