13/08/2026

Law Guide Kannada

Online Guide

ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: 2025ರಲ್ಲಿ ಕರ್ನಾಟಕ ಸಹಕಾರ ಸಂಘಗಳ ಕಾಯಿದೆಗೆ ತರಲಾಗಿರುವ ಹಲವು ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸಹಕಾರಿ ಬ್ಯಾಂಕುಗಳು ತಮ್ಮ ಠೇವಣಿಯ ಶೇ.20ರಷ್ಟು ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು, ಬ್ಯಾಂಕಿನ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವರ್ಷ ತಮ್ಮ ಆಸ್ತಿ ವಿವರಗಳನ್ನು ಘೋಷಿಸಬೇಕು ಎಂಬುದು ಸೇರಿದಂತೆ ಕರ್ನಾಟಕ ಸಹಕಾರ ಸಂಘಗಳ ಕಾಯಿದೆಗೆ ತರಲಾಗಿರುವ ಹಲವು ತಿದ್ದುಪಡಿಗಳನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಮಹಾಮಂಡಳ ನಿಯಮಿತ, ದಿ ತೋಟಗಾರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತವು ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿತ್ತು.

ಸಹಕಾರ ಸಂಘಗಳ ಕಾಯಿದೆಗೆ ತರಲಾಗಿರುವ ತಿದ್ದುಪಡಿಗಳು ಸಹಕಾರ ಸಂಘಗಳ ಸ್ವಾಯತ್ತತೆಯನ್ನು ಕಸಿದುಕೊಳ್ಳಲಿದೆ. ಈ ತಿದ್ದುಪಡಿಗಳು ಸಂವಿಧಾನಬಾಹಿರವಾಗಿದ್ದು, ಅವುಗಳನ್ನು ರದ್ದುಪಡಿಸಬೇಕು. ಅರ್ಜಿ ಇತ್ಯರ್ಥ ಆಗುವ ತನಕ ಕಾಯಿದೆಯ ತಿದ್ದುಪಡಿಗಳ ಜಾರಿಗೆ ತಡೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಈ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಕೆಲ ಅರ್ಜಿ ಆಲಿಸಿದ ಪೀಠವು ರಾಜ್ಯ ಸರ್ಕಾರ, ಸಹಕಾರ ಇಲಾಖೆ, ಸಂಸದೀಯ ಮತ್ತು ಶಾಸನ ರಚನಾ ಇಲಾಖೆ, ಸಹಕಾರ ಸಂಘಗಳ ನಿಬಂಧಕರಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಆಗಸ್ಟ್ 18ಕ್ಕೆ ಮುಂದೂಡಿತು.

ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿದರು. ವಕೀಲ ಮೊಹಮ್ಮದ್ ತಾಹಿರ್ ವಕಾಲತ್ತು ವಹಿಸಿದ್ದರು.

ಎಚ್ ಎನ್ ವೆಂಕಟೇಶ್
ಗೌರವ ಸಂಪಾದಕರು
ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಮೈಸೂರು

Copyright © All rights reserved. | Newsphere by AF themes.