ಕೋರ್ಟ್ ಸ್ಥಳಾಂತರ ಪ್ರಶ್ನಿಸಿ PIL : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಉಡುಪಿಯಲ್ಲಿರುವ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ನ್ಯಾಯಾಲಯವನ್ನು ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕ್ರಮವನ್ನ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದ್ದು ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲಾಗಿದೆ.
ಬ್ರಹ್ಮಾವರಕ್ಕೆ ಶಾಶ್ವತ ನ್ಯಾಯಾಲಯ ಸ್ಥಾಪನೆ ಮಾಡುವ ಕುರಿತ ಪ್ರಸ್ತಾವನೆಗೆ 2022ರಲ್ಲಿ ಕಾನೂನು ಇಲಾಖೆ ಅನುಮೋದಿಸಿದೆ. ಅದನ್ನು ಕಾರ್ಯಗತಗೊಳಿಸುವ ಬದಲು ಉಡುಪಿಯಲ್ಲಿರುವ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯವನ್ನು ಬ್ರಹ್ಮಾವರಕ್ಕೆ ಸ್ಥಳಾಂತರಿಸಲಾಗುತ್ತದೆ. ಇದು ಸರಕಾರದ ತೀರ್ಮಾನಕ್ಕೆ ವಿರುದ್ಧವಾಗಿದ್ದು, ಉಡುಪಿಯ ಜನರಿಗೂ ಅನಾನುಕೂಲವಾಗಲಿದೆ ಎಂದು ಆಕ್ಷೇಪಿಸಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ, ರಾಜ್ಯ ಕಾನೂನು ಇಲಾಖೆ, ಹಣಕಾಸು ಇಲಾಖೆ ಹಾಗೂ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕಚೇರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು 2026ರ ಜನವರಿ 9ಕ್ಕೆ ಮುಂದೂಡಿತು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
