ಪ್ರತಿಭಟನೆ ನಿಲ್ಲಿಸಲು ಕೋರಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ನವದೆಹಲಿ: ಪ್ರತಿಭಟನೆ ನಡೆಯುತ್ತಿರುವ ಸ್ಥಳವನ್ನು ಎಲ್ಲಾ ಕಾಲಕ್ಕೂ ಆಕ್ರಮಿಸಿಕೊಳ್ಳಬಾರದು. ಪ್ರತಿಭಟನೆ ಹೆಸರಿನಲ್ಲಿ ಶಾಶ್ವತವಾಗಿ ಸ್ಥಳ ಆಕ್ರಮಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸುವಂತೆ ಕೋರಿ ವ್ಯಾಪಾರಿಗಳ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಈ ಅರ್ಜಿವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಛಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು, ಕೇಂದ್ರ ಸರ್ಕಾರ ಸೇರಿದಂತೆ ಸಂಬಂಧಪಟ್ಟವರಿಂದ ಪ್ರತಿಕ್ರಿಯೆ ಕೇಳಿದೆ. ಅಲ್ಲದೆ, ಪ್ರತಿಭಟನೆ ನಡೆಯುತ್ತಿರುವ ಸ್ಥಳವನ್ನು ಎಲ್ಲಾ ಕಾಲಕ್ಕೂ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ವ್ಯಾಪಾರಿಗಳ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ‘ಪ್ರತಿಭಟನಾ ಸ್ಥಳದ ಸುತ್ತಮುತ್ತ ಸುಮಾರು 50 ಲಕ್ಷ ಜನರು ವಾಸಿಸುತ್ತಿದ್ದಾರೆ. ಇಂದು ಕನ್ನಾಟ್ ಪ್ಲೇಸ್ ಸೇರಿದಂತೆ ಎಲ್ಲ ಅಂಗಡಿಗಳು ಮುಚ್ಚಿದ್ದು, ಅಲ್ಲಿ ಜನರೇ ಇಲ್ಲ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವ ಎಲ್ಲ ಸಂಘಟನೆಗಳನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಸೇರಿಸದ ಹೊರತು ನ್ಯಾಯಾಲಯವು ಈ ವಿಚಾರದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಎಚ್ ಎನ್ ವೆಂಕಟೇಶ್
ಗೌರವ ಸಂಪಾದಕರು
ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಮೈಸೂರು
